ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಎಂಡಿಎಂಕೆ ಸಂಸದ ಗಣೇಶಮೂರ್ತಿ ನಿಧನರಾಗಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಕ್ಷೇತ್ರದಿಂದ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿಯೂ ಸಹ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಲ್ಲಿದ್ದರು.ಗಣೇಶ್ ಮೂರ್ತಿ ಅವರಿಗೆ 77 ವರ್ಷ ವಯಸ್ಸಾಗಿತ್ತು. ಎಂಡಿಎಂಕೆ ಪಕ್ಷದ ಗಣೇಶಮೂರ್ತಿ ಅವರು ಮಾರ್ಚ್ 24ರಂದು ತಮ್ಮ ನಿವಾಸದಲ್ಲಿ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಸಂಬಂಧ ಈರೋಡ್ ಟೌನ್ ಪೊಲೀಸರು ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿದ್ದರು.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಐಆರ್ಟಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ. ಬಳಿಕ ಕುಮಾರವಲಸು ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.