ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಐಟಿ ಶಾಜಕ್ ಮೇಲೆ ಶಾಕ್ ನೀಡುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಖಾತೆಗಳನ್ನ ಫ್ರೀಜ್ ಮಾಡಿದ್ದ ಐಟಿ ಇಲಾಖೆ ಈಗ ಮತ್ತೊಂದು ಶಾಕ್ ಕೊಟ್ಟಿದೆ. ನಿನ್ನೆಯಷ್ಟೇ 1,823.08 ಕೋಟಿ ಪಾವತಿಸುವಂತೆ ಹೊಸದಾಗಿ ನೋಟಿಸ್ ಜಾರಿ ಮಾಡಿರುವ ಬೆನ್ನಲ್ಲೇ, ಕಳೆದ ರಾತ್ರಿ ಕೂಡ ಆದಾಯ ತೆರಿಗೆ ಇಲಾಖೆಯಿಂದ ಮತ್ತೆ ಎರಡು ನೋಟಿಸ್ಗಳು ಬಂದಿವೆ ಎಂದು ಕಾಂಗ್ರೆಸ್ ಆರೋಪಿಸಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ನಿನ್ನೆ ರಾತ್ರಿ ನಮಗೆ ಇನ್ನೆರೆಡು ನೋಟಿಸ್ ಕಳುಹಿಸಲಾಗಿದೆ. ಕಾಂಗ್ರೆಸ್ ಪಕ್ಷ ಬಿಜೆಪಿಯ ತೆರಿಗೆ ಭಯೋತ್ಪಾದನೆಗೆ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ವಿರೋಧ ಪಕ್ಷಗಳನ್ನು ನಿಷ್ಕ್ರಿಯಗೊಳಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿಯೇ ಕೇಂದ್ರದ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆ ಸಮಯದಲ್ಲಿ ತೊಂದರೆ ನೀಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.