ತವರು ಮೈಸೂರು ಲೋಕಸಭಾ ಕ್ಷೇತ್ರ ಗೆಲ್ಲಲು ಸಿದ್ದರಾಮಯ್ಯ ಸಿದ್ಧಸೂತ್ರ ಹೆಣೆಯುತ್ತಿದ್ದಾರೆ. ಮೈಸೂರು ಲೋಕಸಭಾ ಚುನಾವಣಾ ಅಖಾಡ ಚಟುವಟಿಕೆ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ ಮೈಸೂರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮೇಲೆ ವಿಶೇಷ ಆಸಕ್ತಿ ವಹಿದಸಿದ್ದಾರೆ. ಹೀಗಾಗಿ ಇಂದಿನಿಂದ ಮೂರು ದಿನಗಳ ಕಾಲ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಟೂರ್ ಪ್ಲಾನ್ನಂತೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಆಗಮಿಸಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಪ್ರಚಾರ ನಡೆಸಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಾಳೆ (ಏ.2) ಬೆಳಗ್ಗೆ 10ಕ್ಕೆ ಶಂಕರಮಠಕ್ಕೆ ಸಿಎಂ ಭೇಟಿ ನೀಡಲಿದ್ದು, 11 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಸಂಜೆ 4ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಭೆ ಹಾಗೂ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇನ್ನು ಏ.3ಕ್ಕೆ ಬೆಳಗ್ಗೆ 9:30ಕ್ಕೆ ಸುತ್ತೂರು ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬೆಳಗ್ಗೆ 10:35ಕ್ಕೆ ಚಾಮರಾಜನಗರ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಏ.3ಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆಯಲ್ಲೂ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.