ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕಾನೂನು ಕುಣಿಕೆ ಬಿಗಿಯಾಗಿದೆ. ಇಡಿ ಕಸ್ಟಡಿ ಅವಧಿ ಮುಗಿದ ಕಾರಣ, ಕೇಜ್ರಿವಾಲ್ ರನ್ನ ಅಧಿಕಾರಿಗಳು ಕೋರ್ಟ್ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೂಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ಆರೋಪಿಯನ್ನು ಏಪ್ರಿಲ್ 15 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಎಎಪಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.