5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅಸ್ತು ಅಂತ ಹೇಳಿದೆ. ಈಗಾಗಲೇ ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೆ ಮುಂದಿನ ಪರೀಕ್ಷೆ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ ಅವರು ಇರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು
ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದ ಕೇಜ್ರಿವಾಲ್
ಇಡಿಯಿಂದ ತನ್ನ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ. ಕೇಜ್ರಿವಾಲ್ ಅವರನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು. ವಿಚಾರಣಾ ನ್ಯಾಯಾಲಯದ ಮುಂದೆ ರಿಮಾಂಡ್ ಪ್ರಕ್ರಿಯೆ ನಂತರ ಅದರ ತೀರ್ಪು ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಇಡಿ ಬಂಧಿಸಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ಈಗ ರದ್ದುಗೊಳಿಸಲಾಗಿದೆ.
ಪಕ್ಷಾಂತರ ಪರ್ವ – ಕಾಂಗ್ರೆಸ್ ಸೇರಿದ ಮರಿತಿಬ್ಬೇಗೌಡ
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವವೂ ಶುರು ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಜತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ತೊರೆದ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಜತೆಗೆ ಮಳವಳ್ಳಿ, ಬೆಂಗಳೂರಿನ ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರಗಳ ಜೆಡಿಎಸ್ ಮತ್ತು ನಾನಾ ಮೋರ್ಚಾಗಳ ಕಾರ್ತಕರ್ತರನ್ನು ಕಾಂಗ್ರೆಸ್ ಗೆ ಬರಮಾಡಿಕೊಂಡರು