ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಗುಡುಗಿದರು. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು. ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು ಎಂದು ವೇದಿಕೆಯಲ್ಲೇ ಜಿ.ಟಿ.ದೇವೇಗೌಡರಿಗೆ ಹೇಳಿದರು ಮಾಜಿ ಪ್ರಧಾನಿಗಳು. ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು ಎಂದು ದೇವೇಗೌಡರು ಕಿಡಿಕಾರಿದರು.