ರಾಜ್ಯದ ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೆಸರು ನಿಕ್ಕಿಯಾದ ಮೇಲೆ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್ ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು. ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಆಗಿರುವ ಈ ಮೈತ್ರಿಯೂ ರಾಜ್ಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಲಿದೆ.
ನಾನು ಮಂಡ್ಯ ಲೋಕಸಭೆ ಅಭ್ಯರ್ಥಿಯಾಗಿ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಹೇಳಿದ್ರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಮೈತ್ರಿಯಾಗಿದೆ. ರಾಜ್ಯ ಅಭಿವೃದ್ಧಿಗಾಗಿ ಈ ಮೈತ್ರಿ ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ-ಜೆಡಿಎಸ್ ಹಾಲುಜೇನಿಂದ ಕೆಲಸ ಮಾಡಲಿವೆ. ಹಿಂದಿನಿಂದಲೂ ಜೆಡಿಎಸ್ ಪಕ್ಷವನ್ನು ಮುಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಲೇ ಇದೆ. ಆ ಪಕ್ಷದ ಜತೆ ಸರಕಾರ ಮಾಡಿದ್ದು ನನ್ನ ಅತೀ ಕೆಟ್ಟ ನಿರ್ಧಾರ. ಬಿಜೆಪಿ ಜತೆ ನಾನು ಮಾಡಿದ 20 ತಿಂಗಳ ಆಡಳಿತವನ್ನು ಜನರು ಇಂದಿಗೂ ನೆನೆಯುತ್ತಾರೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ.