ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು ಇಂದಿನಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 13, 14 ಮತ್ತು 15 ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಮಾಹಿತಿ ನೀಡಿದೆ.