ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.ಭಾನುವಾರರಾತ್ರಿಯಿಂದೀಚೆಗೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕನ್ನಡದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು 40ಕ್ಕೂ ಹೆಚ್ಚು ಮಂದಿಯನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ 70ರಿಂದ 80ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ತುಂಗಾ, ಭದ್ರಾ, ಕುಮಾರಧಾರ, ಬಡಗಣಿ, ಬಾಗೇರಿ, ಗುಂಡಬಾಳ, ಅಘನಾಶಿನಿ, ಚಂಡಿಕಾ ಸೇರಿ ಹಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ತೀರ ಪ್ರದೇಶದಲ್ಲಿ ಮತ್ತೊಂದು ಪ್ರವಾಹದ ಆತಂಕ ಶುರುವಾಗಿದೆ. ಉತ್ತರ ಕನ್ನಡ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಭಾರೀ ಮಳೆ ಮುಂದುವರಿದಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮಂಗಳವಾರವೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲಾದ್ಯಂತ ಹಾಗೂ ಹಾಸನದ 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದಲೇ ಉತ್ತಮ ಮಳೆ ಯಾಗಿದ್ದು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ದಿನವಿಡೀ ಭರ್ಜರಿ ಮಳೆ ಸುರಿದಿದೆ. ಉತ್ತರ ಕನ್ನಡದ ಕಾರವಾರ, ಕುಮಟಾ ಸೇರಿ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರವಾರ ತಾಲೂಕಿನ ಅರಗಾ, ತೋಡೂರು, ಚೆಂಡಿಯಾ ಮತ್ತಿತರ ಕಡೆಗಳಲ್ಲೂ 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಇಲ್ಲಿನ 40ಕ್ಕೂ ಹೆಚ್ಚು ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕದ್ರಾ ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿದ್ದು, ಕಾಳಿ ನದಿ ತೀರದು ದ್ದಕ್ಕೂ ಪ್ರವಾಹದ ಆತಂಕ ಮನೆಮಾಡಿದೆ.
ಬಡಗಣಿ, ಬಾಗೇರಿ, ಗುಂಡಬಾಳ ನದಿಗಳು ಅಪಾಯದ ಮಟ್ಟದಲ್ಲಿ ಪ್ರವಹಿಸುತಿದ್ದು, ಹೊಲಗದ್ದೆಗಳು ಜಲಾವೃತವಾಗಿವೆ. ಇನ್ನು ಕರಾವಳಿಯ ಉಳಿದೆರಡು ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲೂ ಸೋಮವಾರ ಬೆಳಗ್ಗಿನಿಂದ ಬಿಡದೆ ಸುರಿಯು ತ್ತಿರುವ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಕುಮಾರಧಾರ, ದರ್ಪಣತೀರ್ಥ, ಸುವರ್ಣಾ, ಸ್ವರ್ಣಾ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳಲ್ಲಿ ನಿಧಾನವಾಗಿ ನೀರಿನಮಟ್ಟ ಏರಿಕೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ತುಂಗಾ, ಭದ್ರಾ ಮತ್ತು ಹೇಮಾವತಿ ನದಿ ನೀರಿನಮಟ್ಟ ಏರಿಕೆಯಾಗಿದೆ. ತುಂಗಾನದಿ ತೀರದಲ್ಲಿರುವ ಕಪ್ಪೆಶಂಕರ ದೇವಾಲಯ, ಸಂಧ್ಯಾವಂದನಾ ಮಂಟಪಕ್ಕೆ ನೀರು ನುಗ್ಗಿ, ಕಪ್ಪೆಶಂಕರ ದೇಗುಲ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಕೊಡಗಿನಲ್ಲಿ ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿ ಪ್ರವಾಹಮಟ್ಟದಲ್ಲಿ ಹರಿಯುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಶಿವಮೊಗ್ಗದಲ್ಲಿ ಭಾರೀ ಗಾಳಿ-ಮಳೆಗೆ ಹೊಸನಗರದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ.