ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ವರ್ಗಾವಣೆಯಾಗಿದ್ದ ಹಣ ಲೋಕಸಭೆ ಚುನಾವಣೆ ಸಂದರ್ಭ ಹೆಂಡ, ಮದ್ಯ ಖರೀದಿಗೆ ಬಳಕೆಯಾಗಿತ್ತು ಎಂಬ ಜಾರಿ ನಿರ್ದೇಶನಾಲಯದ ಪ್ರಕಟಣೆ ಪ್ರತಿಪಕ್ಷ ಬಿಜೆಪಿಯನ್ನು ಕೆರಳಿಸಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ಇದು ನಿಮ್ಮ ಸಾಮಾಜಿಕ ನ್ಯಾಯವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ. ಈಗಾಗಲೇ ಹಗರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರಾಜೀನಾಮೆಗೆ ಆಗ್ರಹಿಸಿದ್ದ ಬಿಜೆಪಿ ಈಗ ಮತ್ತಷ್ಟು ವಾಗ್ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯನವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.