ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 2 ಕೋಟಿ ರುಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಬೆಂಗಳೂರು ಮತ್ತು ಧಾರವಾಡದ ಕೆಐಎಡಿಬಿ ಕಚೇರಿ ಮತ್ತು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿತ್ತು. ದಾಳಿ ಮುಂದುವರಿದಿದ್ದು ಅಧಿಕಾರಿಗಳ ಮನೆಯಲ್ಲಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಶೋಧ ಕಾರ್ಯ ನಡೆಯುತ್ತಿದೆ. ಕಚೇರಿಯ ದಾಖಲೆಗಳನ್ನು ತೆಗೆದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಭೂ ಸ್ವಾಧೀನ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ಹಣವನ್ನು ಕೆಐಎಡಿಬಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒಂದು ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆ ತೋರಿಸಿ ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆಯಲಾಗಿದೆ. ಈ ಅಕ್ರಮ ಎಸಗಲು ಐಡಿಬಿಐ ಬ್ಯಾಂಕ್ನಲ್ಲಿ 24 ಖಾತೆ ತೆರೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.