ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.
ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ.
ಸದ್ಯ, ರಾಜ್ಯಪಾಲರ ಆದೇಶದ ಅಧಿಕೃತ ಪ್ರತಿ ತಲುಪಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ನಿರ್ಧಿರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಕೆಲವು ದಿನಗಳ ಹಿಂದೆ ಕೂಡ ಕಾನೂನು ತಜ್ಞರ ಜತೆ ಸಿಎಂ ಸಮಾಲೋಚನೆ ನಡೆಸಿದ್ದರು.