ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದಿದೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸೇರಿದಂತೆ ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.