ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲೂ ಬದಲಾವಣೆ ಹಾಗೂ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಶ್ರೀಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಳೆದ 20 ವರ್ಷಗಳಿಗೂ ಅಧಿಕ ಕಾಲದಿಂದ ಚಾಮುಂಡೇಶ್ವರಿ ಕ್ಷೇತ್ರದ ಮಾಲೀಕತ್ವದ ಬಗ್ಗೆ ನ್ಯಾಯಾಲಯದಲ್ಲಿ ವ್ಯಾಜ್ಯವಿದೆ. 2004ರಲ್ಲಿ ರಾಜಮನೆತನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಅದು ಈಗಲೂ ವಿಚಾರಣೆ ಹಂತದಲ್ಲಿದೆ. ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್. ದೇವದಾಸ್ ವಾದಿಸಿ, ಶ್ರೀಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಸಂವಿಧಾನದ ಪರಿಚ್ಛೇದ 212 ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿತು. ದೇವಸ್ಥಾನದ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು ಮತ್ತು ಯಾರಿಗೂ ಹಸ್ತಾಂತರಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.