ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದು ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಲು ಮುಂದಾಗಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 11.30ಕ್ಕೆ ಸಭೆ ನಡೆಯಲಿದ್ದು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸನಗೌಡ ದದ್ದಲ್ ಸೇರಿದಂತೆ ನಿಗಮದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಿಗಮದಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗಮದ ಹಣಕಾಸು ಸ್ಥಿತಿಗತಿ, ವಹಿವಾಟು ಮತ್ತಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಯುವ ಸಾಧ್ಯತೆ ಇದೆ.