ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ, ತಮ್ಮ ಅಧಿಕೃತ ನಿವಾಸದಿಂದ ಒಂದು ವಾರದೊಳಗೆ ತೆರಳಲಿದ್ದಾರೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಬುಧವಾರ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದರು. ನಂತರ ಕೆಲವೇ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಆಪ್ತರಾಗಿದ್ದ ಆಪ್ ನಾಯಕಿ ಅತಿಶಿ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
ಭದ್ರತೆಯ ಕಾರಣದಿಂದ ಮನೆ ಖಾಲಿ ಮಾಡದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮನವೊಲಿಸಲು, ಆಪ್ ನಾಯಕರು ಪ್ರಯತ್ನಿಸಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಆದರೆ, ಕೇಜ್ರಿವಾಲ್ ಅವರ ಸಲಹೆಯನ್ನು ಕೇಳಲು ನಿರಾಕರಿಸಿದರು.
“ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರದೊಳಗೆ ತಮ್ಮ ಮನೆ (ಸಿಎಂ ನಿವಾಸ) ಖಾಲಿ ಮಾಡಲು ನಿರ್ಧರಿಸಿದ್ದಾರೆ. ಅವರ ಭದ್ರತೆಯ ಬಗ್ಗೆ ಕಳವಳವಿದೆ, ಅವರ ಮೇಲೆ ಹಲವಾರು ದಾಳಿಗಳು ನಡೆದಿವೆ. ಭದ್ರತಾ ಸಮಸ್ಯೆ ಇದೆ ಎಂದು ನಾವು ಅವರಿಗೆ ಅರ್ಥಮಾಡಿಸಲು ಪ್ರಯತ್ನಿಸಿದ್ದೇವೆ, ಬಿಜೆಪಿಯವರು ತಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಆದಾಗ್ಯೂ, ದೇವರು ನನ್ನನ್ನು ರಕ್ಷಿಸುತ್ತಾನೆ ಎಂದು ಎಂದು ಕೇಜ್ರಿವಾಲ್ ಹೇಳಿರುವುದಾಗಿ ಸಂಜಯ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ದೆಹಲಿ ಸಿಎಂ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಸೋಮವಾರ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜನರಿಂದ “ಪ್ರಾಮಾಣಿಕತೆಯ ಪ್ರಮಾಣಪತ್ರ” ಪಡೆಯುವವರೆಗೆ ಮುಖ್ಯಮಂತ್ರಿಯ ಸ್ಥಾನದಲ್ಲಿರುವುದಿಲ್ಲ ಎಂದು ಅವರು ಹೇಳಿದರು. ಜನಸಾಮಾನ್ಯರು ನಮ್ಮನ್ನು ಒಪ್ಪಿ ಅಧಿಕಾರಕ್ಕೆ ತಂದ ನಂತರವೇ ತಾವು ಮತ್ತು ಮನೀಶ್ ಸಿಸೋಡಿಯಾ ಅವರು ಸರ್ಕಾರಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಅದೇ ವೇಳೆ ನವೆಂಬರ್ನಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸಬೇಕು ಎಂದು ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಒತ್ತಾಯಿಸಿದರು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದೇ ಆರೋಪದ ಮೇಲೆ ಜೂನ್ 26ರಂದು ಸಿಬಿಐ ಅವರನ್ನು ಬಂಧಿಸಿತ್ತು. ಏತನ್ಮಧ್ಯೆ, ರಾಜೀನಾಮೆ ನೀಡುವಂತೆ ಒತ್ತಾಯಿಸಲು ಬಿಜೆಪಿ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂದೀಪ್ ಪಾಠಕ್ ಆರೋಪಿಸಿದ್ದಾರೆ.