ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ರಂದು ಇಡೀ ದಿನ ಕರ್ನಾಟಕದಲ್ಲಿ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಅಮಿತ್ ಶಾ ಅವರು ಚನ್ನಪಟ್ಟಣದಿಂದ ಚುನಾವಣಾ ಪ್ರಚಾರ ಆರಂಭಿಸುತ್ತಾರೆ. ದೇಶ ಒಡೆಯುವವರು ಬೇಕೇ ಅಥವಾ ದೇಶ ಒಂದು ಮಾಡುವವರು ಬೇಕೇ ಎಂಬ ಪ್ರಶ್ನೆಯ ಅಡಿಯಲ್ಲೇ ಈ ಚುನಾವಣೆ ನಡೆಯಲಿದೆ. ದೇಶ ಒಡೆಯುವ ಮಾನಸಿಕತೆಯನ್ನೇ ಸಮರ್ಥಿಸುವ ಕಾಂಗ್ರೆಸ್, ದೇಶ ಒಂದು ಮಾಡುವುದಾಗಿ ಸಂದೇಶ ನೀಡುವ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.
ಅಮಿತ್ ಶಾ ಅವರು ಬೆಳಿಗ್ಗೆ 9 ಗಂಟೆಗೆ ಎರಡೂ ಪಕ್ಷಗಳ ಪ್ರಮುಖ ನಾಯಕರ ಜೊತೆ ಉಪಾಹಾರ ಮಾಡುತ್ತಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುತ್ತಾರೆ.ಮಧ್ಯಾಹ್ನ 2 ಗಂಟೆಯಿಂದ 5 ವರೆಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಕ್ಷೇತ್ರಗಳ ಪ್ರಮುಖರ ಜೊತೆ ಪ್ರತ್ಯೇಕವಾದ ಸಭೆ ನಡೆಯಲಿದೆ. ಚುನಾವಣಾ ಪ್ರಚಾರಕ್ಕೆ ಇದು ಹೆಚ್ಚಿನ ವೇಗ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.