ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೈಲೆಪಲ್ ಕಮಿಟಿ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು. ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೋಟೀಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣಾ ಆಯೋಗ ನೀಡಿರುವ ನೋಟೀಸ್ ಗೆ ಉತ್ತರ ನೀಡಲಾಗಿದೆ. ಸಿಬಿಐ ನವರು ನೀಡಿರುವ ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಿದ್ದೇನೆ ಎಂದರು.