ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ನಾಯಕರು ಕಂಬನಿ ಮಿಡಿದಿದ್ದಾರೆ.
ದೇಶದ ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ದಶಕಗಳ ಕೆಲಸವು ಕರ್ನಾಟಕದ ಅಭಿವೃದ್ಧಿಗೆ ಮತ್ತು ಬೆಂಗಳೂರನ್ನು ಟೆಕ್ನಾಲಜಿ ಕೇಂದ್ರವಾಗಿ ರೂಪಾಂತರಗೊಳ್ಳಲು ಗಣನೀಯ ಕೊಡುಗೆ ನೀಡಿದೆ. ಇಂತಹ ದುಃಖದ ಸಮಯದಲ್ಲಿ ಎಸ್ಎಂ ಕೃಷ್ಣ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಯುವ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರು ಕೂಡ ಎಸ್.ಎಂ ಕೃಷ್ಣ ಅವರು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಶ್ರೀ ಎಸ್.ಎಂ ಕೃಷ್ಣ ಅವರ ನಿಧನದಿಂದ ಅತೀವ ದುಃಖವಾಗಿದೆ. ಕೃಷ್ಣ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಾಗಿ ಅವರ ಕೊಡುಗೆಗಳು ಕರ್ನಾಟಕದ ಪ್ರಗತಿಯನ್ನು ರೂಪಿಸಿದವು. ಬೆಂಗಳೂರನ್ನು ಜಾಗತಿಕ ಭೂಪಟದಲ್ಲಿ ಇರಿಸಿದವು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ಎಂದು ಹೇಳಿದ್ದಾರೆ.