ಈ ಬಾರಿ ವಾಡಿಕೆ ಪ್ರಮಾಣದ ಹಿಂಗಾರು, ಮುಂಗಾರು ಮಳೆ ಹಾಗೂ ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯು ಚಂಡಮಾರುತದಿಂದಾಗಿ ರಾಜ್ಯದ ಒಳನಾಡಿನಲ್ಲಿ ಶುಷ್ಕ ವಾತಾವರಣ ನಿರ್ಮಾಣವಾಗಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ತೀವ್ರ ಶೀತ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ.
ತೀವ್ರ ಶೀತ ಗಾಳಿಯ ಸಾಧ್ಯತೆ ಹಿನ್ನೆಲೆ ಇಂದಿನಿಂದ ಮೂರು ದಿನ ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಅದೇ ಭಾಗದ ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ, ಮೋಡ ಇಲ್ಲದ ಕಾರಣ ಶುಭ್ರಾಕಾಶ ನಿರ್ಮಾಣ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆ ಹಾಗೂ ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಇನ್ನೂ ಎರಡು ದಿನ ಶೀತ ಅಲೆ ಬೀಸಲಿದೆ.
ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಯಲ್ಲಿ 6 ರಿಂದ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಇದು ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಕಡಿಮೆ ತಾಪಮಾನವಾಗಿದೆ. ಇನ್ನು ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಶೀತ ಅಲೆಯ ಇರಲಿದ್ದು, ಅಲ್ಲಿ ತಾಪಮಾನ ಸುಮಾರು 10 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇದು ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಕಡಿಮೆ ತಾಪಮಾನವಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕಂಡುಬರಲಿದೆ. ಇನ್ನು ಈ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಡೆ ಮೂರು ದಿನಗಳ ಕಾಲ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.