“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆ ಕುರಿತು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಉತ್ತರಿಸಿದರು.
“ಅಂಬೇಡ್ಕರ್ ಅವರು ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ. ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವದಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿರುವವರು” ಎಂದರು.
“ಸಂವಿಧಾನಕ್ಕೆ ಮತ್ತು ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನದ ಕುರಿತು ಹೆಚ್ಚಿನ ಚರ್ಚೆಯನ್ನು ನಾವೆಲ್ಲರೂ ಮಾಡಬೇಕಿದೆ” ಎಂದು ಹೇಳಿದರು.