ಆದಿಚುಂಚನಗಿರಿ ಶ್ರೀಗಳ ಪೋನ್ ಟ್ಯಾಪಿಂಗ್ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾಡಿರುವ ಆರೋಪದ ಬಗ್ಗೆ ತೀಕ್ಷ್ಣವಾಗಿ ಉತ್ತರಿಸಿದ ಕುಮಾರಸ್ವಾಮಿ, ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು? ಎಂದು ತರಾಟೆಗೆ ತೆಗೆದುಕೊಂಡರು. ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಹೆಚ್ ಡಿಕೆ, ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ.? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೇವೆ. ಅದರಲ್ಲಿ ಏನಿದೆ.? ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಕಾ? ಎಂದು ಕೇಳಿದರು. ಸ್ವಾಮಿಜಿ ಅವರನ್ನು ಭೇಟಿ ಮಾಡುವುದಕ್ಕೆ ಇವರು ಎಷ್ಟು ಜನ ಹೋಗಿದ್ದರು? ಎಲ್ಲಾ ಟಿವಿಗಳಲ್ಲಿ ವೀಡಿಯೋ ಬಂದಿದೆಯಲ್ಲ. ಇವರು ಏನು ಬೇಕಾದರೂ ಮಾಡಬಹುದು, ನಾವು ಮಾಡುವ ಹಾಗಿಲ್ಲವೇ? ಅದು ಕೂಡ ಒಂದು ದೊಡ್ಡ ರಾಜಕೀಯನಾ? ವರ್ಷದ ಮೊದಲ ದಿನ ನಮ್ಮ ಸಮುದಾಯದ ಗುರು ಹಿರಿಯರ ಆಶೀರ್ವಾದ ಪಡೆಯುತ್ತೇವೆ.
ಅದೇನು ಮಹಾ ಅಪರಾಧವಾ..? ಜ್ವರ ಬಂದಾಗ ಆಸ್ಪತ್ರೆಗೆ ಹೋಗದೆ ಇನ್ನೆಲ್ಲಿಗೆ ಹೋಗಲು ಸಾಧ್ಯ? ನಾನು 140 ಮಠಗಳಿಗೆ ಅನುದಾನ ನೀಡಿದ್ದೆ. ಮಠಗಳು ಮಾಡುತ್ತಿರುವ ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಿದ್ದೆ. ಇದೇನು ಹೊಸದಲ್ಲ ಎಂದು ಖಾರವಾಗಿ ಟಾಂಗ್ ಕೊಟ್ಟರು ಮಾಜಿ ಮುಖ್ಯಮಂತ್ರಿಗಳು. ಒಂದು ವರ್ಷದೊಳಗೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಹೆಚ್.ಡಿ. ಕುಮಾರಸ್ವಾಮಿ, ಕಾದು ನೋಡಿ. ರಾಜಕೀಯ ಎಂದರೆ ಅದು ಹರಿಯುವ ನೀರು. ಯಾವಾಗ ಏನೇನಾಗುತ್ತದೆಯೋ ನಮಗೂ ಗೊತ್ತಾಗಲ್ಲ. ಅವರಿಗೂ ಗೊತ್ತಾಗೋದಿಲ್ಲ. ಸಚಿವರೇ ಹೇಳುತ್ತಿದ್ದಾರೆ, ಕಾಂಗ್ರೆಸ್ ನಾಯಕರೇ ದಿನ ಬೆಳಗಾದರೆ ಹೇಳುತ್ತಿದ್ದಾರಲ್ಲ, ನೀವು ಅವರನ್ನೇ ಕೇಳಿ ಎಂದು ಮಾಧ್ಯಮಗಳಿಗೆ ತಿಳಿಸಿದರು ಕುಮಾರಸ್ವಾಮಿ ಅವರು.ಜೆಡಿಎಸ್ ಎಲ್ಲಿದೆ ಎನ್ನುವ ದುರಹಾಂಕರ ಮಾತುಗಳನ್ನು ಇವರು ಆಡುತ್ತಿದ್ದಾರೆ. ಸಹವಾಸ ಮಾಡಿದಕ್ಕೆ ಈಗ ಜೆಡಿಎಸ್ ಈ ಹಂತಕ್ಕೆ ಬಂದಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ.
ಪಕ್ಕದಲ್ಲಿಯೇ ಕೂತು ಹಳ್ಳ ತೋಡಿದ್ರಲ್ಲ, ಎಲ್ಲಾ ನೆನಪಿದೆ ನನಗೆ ಎಂದು ಆಕ್ರೋಶ ಹೊರಹಾಕಿದ್ರು. ನಿಮ್ಮ ಸರಕಾರ ತೆಗೆದವರು ಯಾರು ಎಂದು ಹಾಸನಾಂಬೆ ಸನ್ನಿಧಿಗೆ ಬಂದು ಆಣೆ ಮಾಡಿ ಎಂದು ಡಿ.ಕೆ.ಶಿವಕುಮಾರ್ ಹಾಕಿರುವ ಸವಾಲಿಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ ಅವರು; ಆಣೆ ಯಾಕೆ ಮಾಡಬೇಕು? ಧರ್ಮಸ್ಥಳ ಆಯುರ್ವೇದ ಆಸ್ಪತ್ರೆಯಲ್ಲಿ ಮೈತ್ರಿ ಸರಕಾರ ತೆಗೆಯಲು ಗುಳಿಗೆ ಅರೆದಿದ್ದನ್ನು ನೀವೇ ತೋರಿಸಿದರಲ್ಲ.. ಅದಕ್ಕೆ ಹಾಸನಾಂಬೆಯ ಮುಂದೆ ಪ್ರಮಾಣ ಮಾಡಬೇಕಾ..? ಧರ್ಮಸ್ಥಳದಲ್ಲಿ ಕುತಂತ್ರ ಮಾಡಿ ಬಂದರಲ್ಲ, ಈ ಸರಕಾರ ಒಂದೇ ವರ್ಷ ಎಂದು ಹೇಳಿದರಲ್ಲ.. ಆಮೇಲೆ ಏನಾಯಿತು ಎನ್ನುವುದು ನಾಡಿನ ಜನರಿಗೆ ಗೊತ್ತಿದೆಯಲ್ಲ. ಮಾಜಿ ಶಾಸಕ ಪ್ರೀತಮ್ ಗೌಡ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಪಾಪ.. ಪದೇಪದೆ ಯಾಕೆ ಅವರ ಹೆಸರು ಎಳೆದು ತರುತ್ತೀರಿ? ಅವರು ಎನ್ ಡಿಎ ಪರ ಮತ ಕೇಳಿದ್ದಾರೆ. ಎನ್ ಡಿಎ ಅಭ್ಯರ್ಥಿಗೆ ಮತ ಕೊಡಿ ಎಂದು ಹೇಳಿದ್ದಾರೆ. ಅವರು ರಾಜ್ಯದ ನಾಯಕರಿದ್ದಾರೆ. ಬೆರೆ ಬೇರೆ ಕಡೆ ಜವಾಬ್ದಾರಿ ಕೊಟ್ಟಿದ್ದಾರೆ, ಎಲ್ಲಾ ಕಡೆ ಹೋಗಬೇಕಿದೆ. ಅವರ ಜತೆಗೆ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಗೊಂದಲ ಇಲ್ಲ ಎಂದರು.