ಬೆಂಗಳೂರು : ರಾಜ್ಯ ಕಾಂಗ್ರೆಸ್ನ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆಯುತ್ತಿರುವ ಅಧಿಕೃತ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ನಿಯಮ ಉಲ್ಲಂಘಿಸಿದ ಮುಖ್ಯ ಕಾರ್ಯದರ್ಶಿಯನ್ನ ಅಮಾನತು ಮಾಡಬೇಕು ಅಂತ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಬರ ಪರಿಹಾರದ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ಹಾಗೂ ಬಿಜೆಪಿ ವಿರುದ್ಧ ರಣದೀಪ್ ಸುರ್ಜೇವಾಲ, ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ವಿಧಾನಸೌಧ ಆವರಣದದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಈ ಸಂಧರ್ಭದಲ್ಲಿ ರಾಜ್ಯದ ಶಕ್ತಿಕೇಂದ್ರವಾದ ವಿಧಾನಸೌಧದ ಆವರಣದಲ್ಲಿ ಇಂತಹ ಅನಧಿಕೃತ ಪ್ರತಿಭಟನೆಗೆ ಅವಕಾಶ ಮಾಡಿಕೊಟ್ಟಂತಹ ಹಾಗೂ ಕಾಂಗ್ರೆಸ್ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯಲ್ರವರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತು ಮಾಡಿ ತನಿಖೆಗೆ ಆದೇಶ ನೀಡಬೇಕೆಂದು ಆಗ್ರಹಿಸಲಾಯಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಸದಸ್ಯ ರಮೇಶ್ಗೌಡ ಅವರು ಈ ಮನವಿಗೆ ಸಹಿ ಮಾಡಿದ್ದು, ಆರ್.ಅಶೋಕ್ ನೇತೃತ್ವದ ನಿಯೋಗವು ಈ ಮನವಿ ಸಲ್ಲಿಸಿತು. ಬಿಜೆಪಿ ಪ್ರಮುಖ ನಾಯಕರು ಇದ್ದರು.