ಶಿವಮೊಗ್ಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಎಲ್ಲ 28 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ. ಬಿ.ವೈ.ರಾಘವೇಂದ್ರ ಅವರು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಇಂದು ನಡೆದ ಬೃಹತ್ ಸಭೆಯಲ್ಲಿ ಅವರು ಮಾತನಾಡಿದರು. ಮನೆಮನೆಗೆ ತೆರಳಿ ಮೋದಿಜೀ ಅವರ ಜನಪರ ಯೋಜನೆಗಳನ್ನು ತಿಳಿಸಿ. ರಾಘವೇಂದ್ರರನ್ನು 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಇದು ರೈತವಿರೋಧಿ ಸರಕಾರ. ಈ ಸರಕಾರ ಪಿಕ್ ಪಾಕೆಟ್ ಸರಕಾರ ಎಂದು ಟೀಕಿಸಿದರು. ಕರ್ನಾಟಕದಲ್ಲಿ ಮೊದಲು 2.75 ಲಕ್ಷ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಸವಾಲೆಸೆದರು. ಕಿಸಾನ್ ಸಮ್ಮಾನ್ ಯೋಜನೆಯಡಿ ಯಡಿಯೂರಪ್ಪ ಅವರು ಆರಂಭಿಸಿದ್ದ 4 ಸಾವಿರ ನೀಡುವುದನ್ನು ಈ ಸರಕಾರ ರದ್ದು ಮಾಡಿದೆ ಎಂದು ಆಕ್ಷೇಪಿಸಿದರು.