ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಹಗ್ಗಜಗ್ಗಾಟ ಶುರುವಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕರ್ನಾಟಕಕ್ಕೆ ಬರಬೇಕಾದ ಪಾಲು ಕೊಡದೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಇದೇ ವಿಚಾರವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್, ಕೇಸರಿ ಪಡೆ ವಿರುದ್ಧ ಮುಗಿಬಿದ್ದಿದೆ. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡಲು ವಿಳಂಬ ಧೋರಣೆ ತಳೆಯುತ್ತಿದೆ, ಈ ಮೂಲಕ ರಾಜ್ಯದ ಜನತೆಗೆ ಅದರಲ್ಲೂ ರೈತ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರ ವಿರುದ್ಧ ವಿಧಾನ ಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಕೇಂದ್ರ ಸರ್ಕಾರಕ್ಕೆ, ರೈತ ವಿರೋಧಿ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ.