ಮಂಗಳೂರು: ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್‌ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮುಡಿಪು-ಸ್ಟೇಟ್ ಬ್ಯಾಂಕ್ ಮಾರ್ಗದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಂಡಕ್ಟರ್ ಪ್ರದೀಪ್ ಎಂಬಾತ ಯುವತಿಯ ಪಕ್ಕದಲ್ಲಿ ನಿಂತು, ಆಕೆಯ ಖಾಸಗಿ ಅಂಗಕ್ಕೆ ಕೈಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಹಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಕೆಎಸ್ಆರ್‌ಟಿಸಿಯಿಂದ ಕ್ರಮ
ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಮಂಗಳೂರು ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಆರೋಪಿ ಕಂಡಕ್ಟರ್ ಪ್ರದೀಪ್‌ನನ್ನು ಅಮಾನತುಗೊಳಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸ್ ತನಿಖೆಗೆ ಒಪ್ಪಿಸಲಾಗಿದೆ.
ಈ ಘಟನೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದು, ಮಹಿಳೆಯರ ಸುರಕ್ಷತೆಗಾಗಿ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಮತ್ತು ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಘಟನೆ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.