ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ವೈಯಕ್ತಿಕ ವಿಚಾರಕ್ಕೆ ನಡೆದಿದೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಅಂತ ಹೇಳಿದರು.
ಇನ್ನು ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.