ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಎರಡು ಮಾರ್ಗಗಳಲ್ಲಿಯೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿಯಿಂದ ಅಮರನಾಥ ಯಾತ್ರೆಗೆ ತೆರಳುವ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಆದ್ದರಿಂದ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಜೂನ್ 29 ರಿಂದ ಅಮರನಾಥ ಯಾತ್ರೆ ಪ್ರಾರಂಭಗೊಂಡಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಪಹಲ್ಗಾಮ್ ಮೂಲಕ 48ಕಿಮೀ ಮಾರ್ಗದಲ್ಲಿ ಮತ್ತು ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಿಂದ ಬಾಲ್ಟಾಲ್ ಮೂಲಕ 14 ಕಿಮೀ ಮಾರ್ಗದಲ್ಲಿ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. ಈವರೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಸುಮಾರು ನಾಲ್ಕು ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಭೇಟಿ ನೀಡಿದ್ದಾರೆ. ಆಗಸ್ಟ್ 19ರಂದು ಈ ಬಾರಿ ಅಮರನಾಥ ಯಾತ್ರೆ ಮುಕ್ತಾಯವಾಗಲಿದೆ.