ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯಾದ್ಯಂತ ಚಳಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರೆಯಲಿದೆ , ಕರ್ನಾಟಕದ ಬೆಂಗಳೂರು, ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ 7 ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ 9 ಜಿಲ್ಲೆಗಳ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಹೆಚ್ಚಿನ ಮಳೆಯಿಂದಾಗಿ ಕೊಡಗು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಕೋಲಾರ, ಮಂಡ್ಯ, ಉಡುಪಿ, ಮಂಗಳೂರು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ತಾಳುಬೆಟ್ಟದ ತಿರುವಿನಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತವಾಗಿದೆ. ರಸ್ತೆಗೆ ಅಡ್ಡವಾಗಿ ಮರಗಳು ಬಿದ್ದದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು ನಾಲ್ಕು ಗಂಟೆಗೂ ಹೆಚ್ಚು ಕಾಲ ಭಕ್ತರು ಪರದಾಡುತ್ತಿದ್ದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮನೆಯ ಗೋಡೆಯೊಂದು ಕುಸಿದಿದ್ದು, ಮನೆಯೊಳಗೆ ಇದ್ದ ಅದೃಷ್ಟವಶಾತ್ ಪಾರಾಗಿದ್ದಾರೆ. ಕರಾವಳಿ ಭಾಗದಲ್ಲೂ ಮಳೆಯಾಗುತ್ತಿದ್ದು, ಬಂಟ್ವಾಳ ಸಮೀಪದ ಉಳ್ಳಗುಡ್ಡೆ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದು ಹಾನಿಯಾಗಿದೆ.
ಇಂದು 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪುದುಚೇರಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದಂತೆ ಬೆಂಗಳೂರು, ಕೋಲಾರ, ತುಮಕೂರು ಸೇರಿ ಮತ್ತಿತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜತೆಗೆ ಕೆಲಕಾಲ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮತ್ತು ತುಂತುರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.