ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜತೆಗೆ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಧೈಯ. ಹಾಗಾಗಿ, ಅಜೀಂ ಪ್ರೇಮ್ಜಿ ಫೌಂಡೇಷನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನವೂ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಸೆಪ್ಟೆಂಬರ್ 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸುವರ್ಣಸೌಧದಲ್ಲಿ ಬುಧವಾರ ಏರ್ಪಡಿಸಿದ್ದ ʻನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ಲೋಗೋ ಅನಾವರಣ, ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ʻನಮ್ಮ ಶಾಲೆ ನಮ್ಮ ಜವಾಬ್ದಾರಿ’ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ದಾನಿಗಳು ಸ್ವಯಂ ಪ್ರೇರಿತರಾಗಿ ಸಹಾಯ ಮಾಡಿದಲ್ಲಿ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ಇನ್ನೂ ಉಜ್ವಲಗೊಳಿಸಬಹುದಾಗಿದೆ ಎಂದರು.