ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ದಕ್ಷಿಣ ಭಾರತದಲ್ಲಿ ‘ವಯಸ್ಕರ ಜನಸಂಖ್ಯೆ’ ಹೆಚ್ಚುತ್ತಿದೆ, ಮಕ್ಕಳು ಹಾಗೂ ಯುವಕರ ಜನಸಂಖ್ಯೆ ಕುಸಿಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದಕ್ಷಿಣ ಭಾರತೀಯ ರಾಜ್ಯಗಳ ಜನರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಅದರಲ್ಲೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡಕ್ಕಿಂತ ಹೆಚ್ಚು ಮಕ್ಕಳು ಇದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡುವ ಕುರಿತಾಗಿ ಹೊಸ ಕಾನೂನು ಜಾರಿಗೆ ತರಲು ಚಿಂತನೆ ನಡೆಸುತ್ತಿದ್ದೇವೆ ಎಂದೂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು 2047 ರ ವರೆಗೆ ಜನಸಂಖ್ಯಾ ಪ್ರಯೋಜನವನ್ನು ಹೊಂದಿದ್ದರೂ, ಆಂಧ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಏರಿಕೆಯಾಗುತ್ತಿದೆ. ಜಪಾನ್, ಚೀನಾ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ಅನೇಕ ದೇಶಗಳು ಈ ಸಮಸ್ಯೆಯೊಂದಿಗೆ ಹೋರಾಡುತ್ತಿವೆ. ಹೆಚ್ಚಿನ ವಯಸ್ಸಾದ ಜನಸಂಖ್ಯೆಯನ್ನು ಹೊಂದಿವೆ. ದಕ್ಷಿಣದಲ್ಲಿ ಭಾರತದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ವಲಸೆ ಹೋಗುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.