ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದ ಎಸ್ಸೆಂಟಿಯಾ ಅಡ್ವಾನ್ಸ್ಡ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ನ ಘಟಕದಲ್ಲಿ ನಿನ್ನೆ ಬುಧವಾರ ರಿಯಾಕ್ಟರ್ ಸ್ಫೋಟಗೊಂಡು ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ದುರ್ಘಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.