ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಬೆಳಗ್ಗೆ 11.30ಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ.ಪ್ರಸನ್ನ ಕುಮಾರ್ ಅವರು, ಪ್ರಕರಣದ ಮತ್ತೊಬ್ಬ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು.
ಈ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆರೋಪಿ ಸತ್ಯನಾರಾಯಣ ವರ್ಮ ಅವರನ್ನು ಮಂಗಳವಾರ (ಜುಲೈ 23) ಕೋರ್ಟ್ಗೆ ಹಾಜರುಪಡಿಸುವಂತೆ ಆದೇಶಿಸಿದರು. ಅಂತೆಯೇ, ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರ ಅವರನ್ನು ಜುಲೈ 18ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ನಂತರ ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜುಲೈ 22ರ ವರೆಗೆ ಕಸ್ಟಡಿ ಅವಧಿಯನ್ನು ವಿಸ್ತರಿಸಿತ್ತು.