ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೈ ಕಮಲ ಕಾದಾಟ ಜೋರಾಗಿದೆ. ಎರಡು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳ ಪರ ದೆಹಲಿ ನಾಯಕರು ಅಖಾಡಕ್ಕೆ ಧುಮುಕಲಿದ್ದಾರೆ.
ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ಮಂಗಳವಾರ ಸಂಜೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಅವರು 7.30ಕ್ಕೆ ರೋಡ್ ಶೋ ಆರಂಭಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಪ್ರಿಯಾಂಕಾ ಗಾಂಧಿ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಮತಯಾಚನೆ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಚಿತ್ರದುರ್ಗ ನಗರದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಿಯಾಂಕಾ ಗಂಧಿ ಭಾಗವಹಿಸಲಿದ್ದಾರೆ.