‘ಅಚ್ಚ ಕನ್ನಡದ ನಿರೂಪಕಿ’ ಎಂದೇ ಪ್ರಸಿದ್ದಿ ಪಡೆದಿದ್ದ ಅಪರ್ಣಾ ಅವರು, ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದರು.
ಅಪರ್ಣಾ ಸಿನಿಮಾ ಜರ್ನಿ
ಕನ್ನಡದ ಖ್ಯಾತ ನಿರೂಪಕಿ, ಕಿರುತೆರೆ ಹಾಗೂ ಹಿರಿತೆರೆ ನಟಿ ಅಪರ್ಣಾ ಅವರು, 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಖ್ಯಾತಿಯನ್ನು ಪಡೆದಿದ್ದರು. ಇನ್ಸ್ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದರು.
ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದರು.