ರಾಜ್ಯದಲ್ಲಿ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಸೋಂಕನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರೋದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಇಂದು ಬೆಳಗ್ಗೆ ಮುಕ್ತ ಕಲಾಪದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಲು ಆದೇಶ ನೀಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಉತ್ತಮ ವಾತಾವರಣದಲ್ಲಿ ಬದುಕುವುದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡೆಂಗ್ಯೂ ಸೋಂಕು ನಿಯಂತ್ರಣ ಅತ್ಯವಶ್ಯಕವಾಗಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಈವರೆಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಬೇಕೆಂದು ಎಂದು ಆದೇಶದಲ್ಲಿ ವಿವರಿಸಲಾಗಿದೆ.