ಕೋಲ್ಕತ್ತದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಕರ್ನಾಟಕದಾದ್ಯಂತ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಕರ್ನಾಟಕ ಸರ್ಕಾರದ ಆದೇಶ ಹೊರಡಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದು, ಒಪಿಡಿ ಸೇವೆ ಬಂದ್ ಆಗಿದೆ. ಎಮರ್ಜೆನ್ಸಿ ಸೇವೆ, ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ, ಎಮರ್ಜೆನ್ಸಿ ಸರ್ಜರಿ ಸೇವೆಗಳನ್ನು ಒದಗಿಸುವುದಾಗಿ ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.