ಬೆಂಗಳೂರಿನಲ್ಲಿ ಕಳೆದ ರಾತ್ರಿಯಿಂದಲೂ ಭರ್ಜರಿ ಮಳೆಯಾಗುತ್ತಿದೆ. ಬಿಟ್ಟುಬಿಡದೆ ವರುಣನ ಆರ್ಭಟ ನಗರದಾದ್ಯಂತ ಮುಂದುವರೆದಿದೆ. ಬೆಂಗಳೂರು ನಗರ ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದೀಗ ಬೆಂಗಳೂರು ನಗರಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಇದೀಗ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ನಾಳೆ (ಅ.23) ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಪ್ರಕಟಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಅವರು ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಎಂದಿನಂತೆ ತೆರೆದಿರುತ್ತವೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಒಂದು ವಾರದ ಕಾಲ ಮಳೆ ಆರ್ಭಟ ಮುಂದುವರೆಯಲಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.