ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಗಾರು ಅವಧಿಯಲ್ಲಿನ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯನ್ನು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿಯಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಜೂನ್ 1 ರಿಂದ ಆಗಸ್ಟ್ 15 ರವರೆಗೆ ರಾಜ್ಯದಲ್ಲಿ ಮಳೆಯಿಂದ ಉಂಟಾದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಬಗ್ಗೆ ಸಚಿವರು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಉಮಾ ಮಹಾದೇವನ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.