2022 ರಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ರವರ ಆತ್ಮಹತ್ಯೆ ಪ್ರಕರಣವನ್ನು ಹೋಲುವಂಥ ಮತ್ತೊಂದು ಪ್ರಕರಣವೀಗ ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಸಚಿವ ಪ್ರೀಯಾಂಕ್ ಖರ್ಗೆ ಆಪ್ತನ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರನೊಬ್ಬ ಸುದೀರ್ಘವಾಗಿ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೀದರ್ ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಶರಣಾಗಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕದಾಗಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನೂ ಖಂಡಿಸಿ ಡೆತ್ ನೋಟ್ ಸಮೇತವಾಗಿ ಬಿಜೆಪಿ ರಾಜಾಧ್ಯಕ್ಷ ಬಿ. ವೈ ವಿಜಯೇಂದ್ರ ಟ್ವೀಟ್ ಮೂಲಕ ಸರ್ಕಾರದ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ರಾಜಾಧ್ಯಕ್ಷ ವಿಜಯೇಂದ್ರ ಟ್ವೀಟ್ ವಿವರ ಹೀಗಿದೆ
ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ್ಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೀಡಿದಂತಿದೆ. ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ವಿಧಾನ ಮಂಡಲದ ಸುವರ್ಣ ಸೌಧಕ್ಕೆ ನುಗ್ಗಿ ಶಾಸಕರಾದ ಸಿಟಿ ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ, ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್ ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ. ಪ್ರತಿಯೊಂದು ವಿಷಯದಲ್ಲೂ ಅನಗತ್ಯ ಮೂಗು ತೂರಿಸಿ ತಮ್ಮ ನಡೆ, ನುಡಿಗಳಲ್ಲಿ ದಾಷ್ಟ್ಯತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ. ಆತ್ಮಹತ್ಯೆಗೊಳಗಾದ ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಲಿ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ವಿಪರೀತ ಆರ್ಥಿಕ ಒತ್ತಡ ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸುತ್ತಿದೆ. ಸಚಿವರ ಕೈ ಕೆಳಗಿನ ಅಧಿಕಾರಿಗಳು ಹಾಗೂ ಆಪ್ತರ ಒತ್ತಡಗಳು ಗುತ್ತಿಗೆದಾರರನ್ನು ಉಸಿರುಗಟ್ಟಿಸುತ್ತಿವೆ.
ಪ್ರಿಯಾಂಕ್ ಖರ್ಗೆ ಅವರ ಬಲಗೈ ಬಂಟ ಹಾಗೂ ಕಾಂಗ್ರೆಸ್ ಮುಖಂಡ ರಾಜುವಿನ ದೌರ್ಜನ್ಯಕ್ಕೆ ಸಿಲುಕಿ, ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಬರೆದಿಟ್ಟಿರುವ ಪತ್ರ ಇದಕ್ಕೆ ಸಾಕ್ಷಿ ಒದಗಿಸಿದೆ. ಈ ಕೂಡಲೇ ಪೊಲೀಸ್ ಅಧಿಕಾರಿಗಳು ಪಕ್ಷಪಾತಿಗಳಂತೆ ವರ್ತಿಸುವುದನ್ನು ಬಿಟ್ಟು ಪಾರದರ್ಶಕ ತನಿಖೆ ನಡೆಸದಿದ್ದರೆ, ಈ ವಿಷಯವನ್ನು ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಿದೆ.
ಸಾವಿಗೀಡಾದ ನತದೃಷ್ಟ ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ, ಸರ್ಕಾರ ಈ ಕೂಡಲೇ ಆ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಿ. ಮೃತ ಗುತ್ತಿಗೆದಾರ ಸಚಿನ್ ಪಡೆದಿದ್ದ ಗುತ್ತಿಗೆ ಕೆಲಸಗಳ ಬಾಕಿ ಉಳಿದಿರುವ ಹಣವನ್ನು ಪಾವತಿಸಿ, ಆ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಿ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗುವ ಮೂಲಕ ನ್ಯಾಯ ಒದಗಿಸಲಿ ಎಂದು ಒತ್ತಾಯಿಸುತ್ತೇನೆ.