- ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದ ಪ್ರಜ್ವಲ್
- ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ
- ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಜಾ
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ವಜಾ ಆಗಿದೆ. ಸದ್ಯ ಪ್ರಜ್ವಲ್ ರೇವಣ್ಣ ಎಸ್ಐಟಿ ವಶದಲ್ಲಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಬುಧವಾರ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅವರ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿದ್ದು, 1 ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ಮೊದಲು ಪ್ರಜ್ವಲ್ ರೇವಣ್ಣ ಬಂಧಿಸಲಾಗಿತ್ತು. ಕರ್ನಾಟಕ ಸರ್ಕಾರ ಅವರ ವಿರುದ್ಧದ ಎಲ್ಲಾ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ ಮಾಡಿದೆ. ಒಟ್ಟು 4 ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್ಐಟಿ ಅವರನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆ, ಸ್ಥಳ ಮಹಜರು ನಡೆಸುತ್ತಿದೆ. ಹಾಸನದ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ 2024ರ ಮತದಾನ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದರು. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅವರು ಮೇ 31ರಂದು ರಾಜ್ಯಕ್ಕೆ ವಾಪಸ್ ಆಗಿದ್ದರು. ಆಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಗಿತ್ತು.