ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ.
ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ನನಗೆ ಅನುಕರಣೀಯ.
ಮೃತರ ಆತ್ಮಕ್ಕೆ ಚಿರ ಶಾಂತಿ ಕೊರುತ್ತೇನೆ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಆಪ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.