ಬೆಳಗಾವಿಯಲ್ಲಿ ಇಂದಿನಿಂದ 2 ದಿನಗಳ ಕಾಲ ಗಾಂಧಿ ಭಾರತ ಹೆಸರಿನಲ್ಲಿ ಮಹಾತ್ಮ ಗಾಂಧಿಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷದ ಸಂಭ್ರಮಕ್ಕೆ ಕಾಂಗ್ರೆಸ್ ನಾಯಕರ ದಂಡೇ ರಾಜ್ಯಕ್ಕೆ ಹರಿದು ಬರಿತ್ತಿದೆ. ಎಐಸಿಸಿ ಅಧ್ಯಕ್ಷರಾದ ಕರ್ನಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರು ಈ ಒಂದು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯ ಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ಮಾಜಿ ಕೇಂದ್ರ ಸಚಿವ ಶಶಿ ತರೂರ್, ಕಾಂಗ್ರೆಸ್ ಯುವ ನಾಯಕ ಕನ್ನಯ್ಯಾ ಕುಮಾರ ಗುರುವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.
ಕರ್ನಾಟಕ ವಿಧಾನಸಭೆ ಸಭಾಪತಿ ಯುಟಿ ಖಾದರ್ ಕೂಡ ಬೆಳಗಾವಿಗೆ ಎಂಟ್ರಿ ಕೊಟ್ಟಿದ್ದಾರೆ. ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ನೇತೃತ್ವದ ತಂಡದಿಂದ ಕೈ ಮುಖಂಡರುಗಳಿಗೆ ಸ್ವಾಗತ ಕೋರಿದ್ದಾರೆ. ಲಂಬಾಣಿ ಹಾಡು ನೃತ್ಯದ ಮೂಲಕ ಯುವತಿಯರಿಂದ ವಿಭಿನ್ನವಾಗಿ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಎಲ್ಲೆಲ್ಲೂ ಕಟೌಟ್, ಬ್ಯಾನರ್
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಬೆಳಗಾವಿ ನಗರದೆಲ್ಲೆಡೆ ಕಾಂಗ್ರೆಸ್ ಬಾವುಟ, ನಾಯಕರ ಕಟೌಟ್ ರಾರಾಜಿಸುತ್ತಿವೆ. ಎಲ್ಲಿ ನೋಡಿದರು ಕಾಂಗ್ರೆಸ್ ನಾಯಕರ ಭಾವಚಿತ್ರಗಳೇ ತುಂಬಿವೆ. ಮಹಾತ್ಮ ಗಾಂಧೀಜಿ ಅವರ ಸ್ಮರಣೆಯ ಚಿತ್ರಗಳು ಬ್ಯಾನರ್ ಗಳು ರಾರಾಜಿಸುತ್ತಿವೆ.
ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ
ಇಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯಲ್ಲಿ ಎಐಸಿಸಿ ಕಾರ್ಯಕಾರಣಿ ಸಮಿತಿ ಸಭೆ ನಡೆಯಲಿದೆ. ಬೆಳಗಾವಿ ಟಿಳಕವಾಡಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಅಂದು ಗಾಂಧೀಜಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದರೆ, ಇಂದು ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಕರ್ನಾಟಕ ಮೂಲದವರಾದ ಮಲ್ಲಿಕಾರ್ಜುನ ಖರ್ಗೆ ಈ ಸಭೆಗೆ ಅಧ್ಯಕ್ಷತೆ ವಹಿಸುತ್ತಿರುವುದು ನಾಡಿಗೆ ಹೆಮ್ಮೆಯ ವಿಚಾರ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 200ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಹಾಜರಿರುತ್ತಾರೆ.
ಗಾಂಧಿ ಪುತ್ತಳಿ ಅನಾವರಣ
ಬೆಳಗಾವಿಯಲ್ಲಿ ನಾಳೆ ಅಂದರೆ ಶುಕ್ರವಾರ ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ಥಳಿ ಅನಾವರಣ ಮಾಡಲಿದ್ದಾರೆ. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ‘ಕೈ’ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿಶೇಷ ಏನೆಂದರೆ ಈ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗಿದೆ.
ನಾಳೆ ಬೃಹತ್ ಸಮಾವೇಶ
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಮಾವೇಶ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶಕಾರ್ಯಕ್ರಮ ಆಯೋಜಿಸಿದ್ದು, ಈ ಸಮಾವೇಷಕ್ಕೆ . ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂಬ ಹೆಸರಿಡಲಾಗಿದೆ.
ಕಾಂಗ್ರೆಸ್ ನ ಗಾಂಧಿ ಭಾರತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ 2 ದಿನ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಒಟ್ಟಾರೆ 1924ರಲ್ಲಿ ಮಹಾತ್ಮ ಗಾಂಧಿಜಿ ನೇತೃತ್ವದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶಕ್ಕೆ 100 ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ಸಂಭ್ರಮದ ಕಡಲಲ್ಲಿ ಮುಳುಗಿದೆ.