ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್ ರದ್ದುಪಡಿಸಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಮೂಲ ಬೈಲಾ ಯಥವತ್ತಾಗಿ ಜಾರಿಗೊಳಿಸಬೇಕು ಎಂದು ಸಾದರ ಲಿಂಗಾಯತ ಸಮಾಜ ಒಕ್ಕೊರಲ ನಿರ್ಣಯ ಕೈಗೊಂಡಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ, ಬಿ.ಸಿ.ಪಾಟೀಲ, ಎಂಎಲ್ಸಿ ರುದ್ರೇಗೌಡ, ಸಮಾಜದ ಹಿರಿಯ ಮುಖಂಡರಾದ ಆನಗೋಡು ನಂಜುಂಡಪ್ಪ, ಅಣಬೇರು ರಾಜಣ್ಣ ಇತರರ ನೇತೃತ್ವದ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ ಈ ತೀರ್ಮಾನ ಕೈಗೊಳ್ಳಲಾಯಿತು.
ಇದೇ ವೇಳೆ ಸ್ವಾಮೀಜಿರನ್ನು ಪೀಠದಿಂದ ಕೆಳಗೆ ಇಳಿಸಲು ಅಖಿಲ ಭಾರತ ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗಿದ್ದು ಆಗಸ್ಟ್ 18ರಂದು ಸಿರಿಗೆರೆ ತರಳಬಾಳು ಮಠಕ್ಕೆ ಹೋಗಲು ನಿರ್ಧಾರ ಮಾಡಲಾಗಿದೆ. ಹತ್ತು ವರ್ಷದ ಹಿಂದೆ ಸಿರಿಗೆರೆ ಸ್ವಾಮೀಜಿ ಪದತ್ಯಾಗ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಭಕ್ತರ ಆಗ್ರಹದಿಂದ ತ್ಯಾಗ ಮಾಡಲಿಲ್ಲ. ನಂತರ ಮಠದ ಟ್ರಸ್ಟ್ಗೆ ತಿದ್ದುಪಡಿ ಮಾಡಿಕೊಂಡಿದ್ದಾರೆ. ಅದು ಅಗತ್ಯ ಇತ್ತಾ ಎಂದು ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ.