ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಮನೆ ಊಟ, ಮಲಗಲು ಹಾಸಿಗೆ ಹಾಗೂ ಕೆಲವು ಪುಸ್ತಕಗಳು ಬೇಕೆಂದು ನಟ ದರ್ಶನ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯಲ್ಲಿ ಆರೋಗ್ಯದ ಕಾರಣ ನೀಡಿದ್ದರು. ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ನಡೆಸಲಿದೆ.
ಕಳೆದ ಬಾರಿ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಈ ಬಗ್ಗೆ ನಿರ್ಣಯ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈಗಾಗಲೇ ವರದಿ ಸಲ್ಲಿಕೆ ಆಗಲಿದ್ದು, ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ತನ್ನ ನಿರ್ಣಯ ಪ್ರಕಟಿಸುವ ಸಾಧ್ಯತೆ ಇದೆ. ಜೈಲು ಅಧಿಕಾರಿಗಳು, ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗಿದೆ. ಜೈಲಿನ ವೈದ್ಯಾಧಿಕಾರಿಗಳು ಸಹ ದರ್ಶನ್ಗೆ ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗುತ್ತಿದೆ.