ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇಂದು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಪ್ರಕಟಕ್ಕೆ ಕೌಂಟ್ಡೌನ್ ಶುರುವಾಗಿದೆ. ಹೀಗಾಗಿ ಕರ್ನಾಟಕ ಮಾತ್ರವಲ್ಲ ಇಡೀ ದೇಶದ ಚಿತ್ತ ರಾಜ್ಯ ಹೈಕೋರ್ಟ್ನತ್ತ ನೆಟ್ಟಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು
ಸಿದ್ದರಾಮಯ್ಯ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದ್ರೆ ಮುಡಾದಿಂದ ಅಕ್ರಮವಾಗಿ 14 ಸೈಟ್ಗಳನ್ನು ಪಡೆದಿರುವ ಆರೋಪವಿದೆ. ಇದೇ ಪ್ರಕರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ಸಾವಿರಾರು ಪುಟಗಳ ದಾಖಲೆ, 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಪ್ರಕಟಕ್ಕೆ ಮುಹೂರ್ತ ಫಿಕ್ಸ್ ಮಾಡಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ತೀರ್ಪು ಪ್ರಕಟಿಸಲಿದೆ.
ಸಿದ್ದು ಪರ ತೀರ್ಪು ಬಂದರೆ?
ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದರೆ ಸಿದ್ದರಾಮಯ್ಯ ನಿರಾಳರಾಗಬಹುದು. ಒಂದು ಅರ್ಥದಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಲಿದೆ. ಅಷ್ಟೇ ಅಲ್ಲ ರಾಜ್ಯ ರಾಜಕೀಯದಲ್ಲಿ ಮತ್ತು ಸರ್ಕಾರದಲ್ಲಿ ಸಿದ್ದರಾಮಯ್ಯ ಶಕ್ತಿ ಮತ್ತಷ್ಟು ಹೆಚ್ಚಲಿದೆ. ಪಕ್ಷದೊಳಗೆ ಸಿಎಂ ಬದಲಾವಣೆಯ ಕೂಗಿಗೂ ಫುಲ್ಸ್ಟಾಪ್ ಬೀಳಲಿದೆ. ಇನ್ನು ಸಿಎಂ ರಾಜೀನಾಮೆಗೆ ಪಟ್ಟುಹಿಡಿದಿರುವ ವಿಪಕ್ಷಗಳಿಗೂ ಹಿನ್ನಡೆಯಾಗಲಿದೆ.
ಸಿದ್ದು ವಿರುದ್ಧ ತೀರ್ಪು ಬಂದರೆ?
ಇನ್ನು ಹೈಕೋರ್ಟ್ ರಾಜ್ಯಪಾಲರ ಆದೇಶ ಎತ್ತಿಹಿಡಿದರೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಲಿದೆ. ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರುಗಳಿಗೆ ಮತ್ತೆ ಜೀವ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸುವ ಸಾಧ್ಯತೆಯಿದೆ. ಒಂದು ವೇಳೆ ಸಿಎಂ ವಿರುದ್ಧ ಎಫ್ಐಆರ್ ದಾಖಲಾದರೆ ರಾಜೀನಾಮೆ ಒತ್ತಡ ಹೆಚ್ಚಾಗಲಿದೆ. ಪ್ರತಿಪಕ್ಷಗಳು ಕೂಡ ಸಿಎಂ ರಾಜೀನಾಮೆಗೆ ಪಟ್ಟು ಹಿಡಿಯಲಿವೆ.