ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಿದ್ದರಾಮಯ್ಯ ಅವರ ಮತ್ತೊಂದು ಕನಸಿಗೆ ಇಂದು ಚಾಲನೆ
ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಇಂದು (ಡಿ 26) ಮುಖ್ಯಮಂತ್ರಿಗಳೇ ಉದ್ಘಾಟಿಸಲಿದ್ದಾರೆ.
“ಅಸ್ಮಿತೆ ವ್ಯಾಪಾರಮೇಳ-2024” ಹೆಸರಿನಲ್ಲಿ ಮುಖ್ಯಮಂತ್ರಿಗಳ ಕನಸು ಮತ್ತು ಕಾಳಜಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಸಾಕಾರಗೊಳಿಸಿದ್ದಾರೆ.
ಶ್ರಮಿಕ ವರ್ಗದ ಮಹಿಳಾ ಶಕ್ತಿಯನ್ನು ಆರ್ಥಿಕವಾಗಿ ಮೇಲೆತ್ತಬೇಕು ಎನ್ನುವ ಮುಖ್ಯ ಉದ್ದೇಶದೊಂದಿಗೆ ಹಲವಾರು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ.
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಈ ಮೇಳವನ್ನು ಡಿಸೆಂಬರ್ 26 ರಿಂದ ಜನವರಿ 4 ರವರೆಗೆ ಆಯೋಜಿಸಲಾಗಿದೆ.
ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆದುಕೊಂಡು ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚಿನ ವಹಿವಾಟಿನೊಂದಿಗೆ ಅವರ ಆರ್ಥಿಕ ಸಬಲತೆಗೆ ಕೈ ಜೋಡಿಸಲಿದ್ದಾರೆ ಎಂಬ ನಿರೀಕ್ಷೆ ಹೊಂದಲಾಗಿದೆ.
ಮಹಿಳೆಯರ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿ ಸಂತೆ, ತಾಲ್ಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಹಾಗೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳನ್ನು ಆಯೋಜಿಸುವ ಮೂಲಕ ಮಾರುಕಟ್ಟೆ ಒದಗಿಸಲಾಗುತ್ತಿದೆ.
ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸುತ್ತಿದ್ದಾರೆ. ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮಳಿಗೆಗಳನ್ನು ಒಳಗೊಂಡಿದೆ.
ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಡಿಸೆಂಬರ್ 26ರ ಬೆಳಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನವಿರಲಿದೆ.
ಪ್ರದರ್ಶನಗೊಳ್ಳುವ ಆಕರ್ಷಕ ವಸ್ತುಗಳು
ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ಅಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು.
ಅಕ್ಕ ಕೆಫೆ ಮಾದರಿ
ಸರ್ಕಾರವು 2024-25ನೇಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ಅಕ್ಕ ಕೆಫೆಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಅಕ್ಕ-ಕೆಫೆ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್ ಅನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷೀಣೀಯವಾಗಿ ಆಯೋಜಿಸಲಾಗುತ್ತಿದೆ.
ಬಾಯಲ್ಲಿ ನೀರೂರಿಸುವ ಆಹಾರ
ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದ ಗಿರ್ಮಿಟ್/ಮಂಡಕ್ಕಿ, ಮೆಣಸಿನಕಾಯಿ ಬಜ್ಜಿ, ಜೋಳದ ಖಡಕ್ ರೊಟ್ಟಿ, ಹೋಳಿಗೆ, ಮಂಗಳೂರ ನೀರ್ ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳು ಲಭ್ಯವಿರಲಿದೆ.
ಇಲಾಖೆಯ ಸಾಧನೆಗಳು
- ಬೆಳಗಾವಿ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ “ಅಕ್ಕ ಕೆಫೆ” ಯನ್ನು ಉದ್ಘಾಟಿಸಲಾಗಿದೆ.
- ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ನಿನ ಮಹಿಳಾ ಸ್ವ ಸಹಾಯ ಗುಂಪಿನ ಉತ್ಪನ್ನಗಳ ಮಳಿಗೆಯನ್ನು ಆರಂಭಿಸಲಾಗಿದೆ.
- ರಾಜ್ಯದಲ್ಲಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ, 4.50 ಲಕ್ಷ ಕುಟುಂಬಗಳನ್ನು ನಗರ ಅಭಿಯಾನದಡಿ ಸಂಘಟಿಸಲಾಗಿದೆ.
- ಪ್ರತಿಯೊಬ್ಬ ಮಹಿಳೆಯು ಸ್ವಾವಲಂಬನೆಯ ಬದುಕಿನೊಂದಿಗೆ ಕುಟುಂಬದ ಅಭಿವೃದ್ಧಿಗೆ ಸಹಕರಿಸಲು ಈ ಅವಕಾಶ ಕಲ್ಪಿಸಲಾಗಿದೆ.