ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ದಿನಗಳ ಕಾಲ ಮೈಸೂರಿಗೆ ಭೇಟಿ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಕಾಂಗ್ರೆಸ್ ಕೂಡ ಬೃಹತ್ ಸಮಾವೇಶ ನಡೆಸಿತ್ತು. ಈ ಕಾರಣದಿಂದ ಈ ಮೊದಲು ನಿಗದಿಯಾಗಿದ್ದ ಮೈಸೂರು ಪ್ರವಾಸವನ್ನು ಮುಖ್ಯಮಂತ್ರಿಗಳು ರದ್ದುಗೊಳಿಸಿದ್ದರು.
ಇದರಂತೆ ಸೋಮವಾರ ಮುಖ್ಯಮಂತ್ರಿಗಳು ಮೈಸೂರಿಗೆ ಭೇಟಿ ನೀಡಿದ್ದು, ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ದೇವಸ್ಥಾನದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಸುಧಾರಣೆಗೆ ನೀಲನಕ್ಷೆ ರೂಪಿಸಲಿದ್ದಾರೆ.