ಮಲೆನಾಡು ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬರ್ತಿದೆ. 105 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇದೀಗ 55.972 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 9 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬಂದಿದೆ.
ಸದ್ಯ ಜಲಾಶಯಕ್ಕೆ 1,08,090 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 400 ಕ್ಯುಸೆಕ್ ನೀರನ್ನ ಹೊರಗೆ ಬಿಡಲಾಗ್ತಿದೆ. ಗುರುವಾರವು ಸಹ 7 ಟಿಎಂಸಿ, ಇಂದು 9 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದೇ ರೀತಿ ನೀರು ಹರಿದುಬಂದರೆ ಒಂದೇ ವಾರದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.