ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಶಿಕ್ಷಣ ಇಲಾಖೆ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿದ್ದು, ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಅಧಿಸೂಚನೆ ಹೊರಬೀಳಲಿದೆ. ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35000, ಪ್ರೌಢಶಾಲೆಗಳಲ್ಲಿ 10000 ಸೇರಿ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 50,000, ಪ್ರೌಢಶಾಲೆಗಳಲ್ಲಿ ಕನಿಷ್ಠ 5000 ಶಿಕ್ಷಕರ ಕೊರತೆ ಇದೆ. ಈ ಹಿನ್ನೆಲೆ ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಿದೆ. ರಾಜ್ಯ ಸರ್ಕಾರವು ಬಜೆಟ್ನಲ್ಲಿ ಘೋಷಿಸಿರುವಂತೆ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. ಶಿಕ್ಷಣ ಇಲಾಖೆಯು ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮಾಡಿಕೊಳ್ಳುತ್ತಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅನುಮತಿ ನೀಡಿದ ತಕ್ಷಣ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ.
ಶಿಕ್ಷಣ ಇಲಾಖೆಯು ಹೊಸದಾಗಿ ಶಿಕ್ಷಕರ ನೇಮಕಾತಿ ಮಾಡುವುದಕ್ಕೂ ಮೊದಲು 2022- 23ನೇ ಸಾಲಿನಲ್ಲಿ ನೇಮಕ ಮಾಡಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣಗೊಂಡಿಲ್ಲ. ಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿದೆ. ಹೊಸ ನೇಮಕಾತಿಗೆ ಹಿಂದಿನ ನೇಮಕಾತಿ ಆದೇಶವು ಮುಖ್ಯವಾಗಲಿದೆ. 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 13,352 ಮಂದಿ ಅರ್ಹತೆ ಪಡೆದಿದ್ದರು. ಇದರಲ್ಲಿ ಇಲ್ಲಿಯವರೆಗೂ 11,494 ಮಂದಿಗೆ ನೇಮಕಾತಿ ಪ್ರಮಾಣಪತ್ರ ವಿತರಣೆ ಮಾಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ಪ್ರಮಾಣಪತ್ರ ವಿತರಣೆ ಮಾಡಬೇಕಿದೆ.